ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವನ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು
ಅಲಹಾಬಾದ್: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಅಕ್ಟೋಬರ್ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಚಲಿಸಿದ್ದವು. ಬಳಿಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.
ಲಖಿಂಪುರ ಖೇರಿ ಹಿಂಸಾಚಾರ ಪೂರ್ವಯೋಜಿತ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಹೇಳಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಜಾಗರೂಕತೆಯಿಂದ ವಾಹನ ಚಾಲನೆ), 338 (ನಿರ್ಲಕ್ಷ್ಯದಿಂದ ಗಂಭೀರ ಗಾಯಗೊಳ್ಳಲು ಕಾರಣವಾಗುವುದು) ಹಾಗೂ 340 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಇದರ ಬದಲಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ (ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಬೇಕು ಎಂದು ಎಸ್‌ಐಟಿ ವಿನಂತಿ ಮಾಡಿತ್ತು.




