ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದ ಡಾ. ಎಚ್.ಡಿ.ಚೌಡಯ್ಯ ನಿಧನ
ಮಂಡ್ಯ: ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು.
ತಾಲ್ಲೂಕಿನ ಹೊಳಲು ಗ್ರಾಮದ ಚೌಡಯ್ಯ ಅವರು ಸಹಕಾರ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.
1960ರಿಂದ 1968ರವರೆಗೆ ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ನಂತರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.
1978ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು. 1983ರ ಚುನಾವಣೆಯಲ್ಲಿ ತಮ್ಮ ರಾಜಕೀಯ ಗುರು ಕೆ.ವಿ.ಶಂಕರಗೌಡ ವಿರುದ್ಧವೇ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
1985ರಲ್ಲಿ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 1999ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1991 ಕಾಂಗ್ರೆಸ್‌ನಿಂದ ಚೌಡಯ್ಯ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
2008ರಲ್ಲಿ ಕೆರಗೋಡು ಕ್ಷೇತ್ರ ಮಂಡ್ಯ ಕ್ಷೇತ್ರದೊಂದಿಗೆ ವಿಲೀನವಾಯಿತು.




