ಹೊಸಕೋಟೆ: ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿಯಾದ ಕಾರು: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೃತ್ಯು
ಹೊಸಕೋಟೆ: ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ನಂತರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ರಾಷ್ಟ್ರೀಯ ಹೆದ್ದಾರಿ 75ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಘಟನೆ ನಡೆದಿದೆ..
ಭೀಕರ ರಸ್ತೆ ಅಪಘಾತದಲ್ಲ ಬೆಂಗಳೂರಿನ ಕೃಷ್ಣರಾಜಪುರ ಗಾರ್ಡನ್ ಸಿಟಿ ಕಾಲೇಜು ವಿದ್ಯಾರ್ಥಿಗಳಾದ ವೈಷ್ಣವಿ, ಭರತ್, ಸಿರಿಲ್, ವೆಂಕಟ್ ಮೃತಪಟ್ಟ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕೋಲಾರ ರಸ್ತೆ ಕೆಫೆ ಕಾಫಿಡೇನಲ್ಲಿ ಕಾಫಿ ಕುಡಿದು ವಾಪಸ್ಸಾಗುತ್ತಿರುವ ವೇಳೆ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಯುವಕರು ಹಾಗೂ ಓರ್ವ ಯುವತಿ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿದೆ.
ಸ್ಥಳಕ್ಕೆ ಹೊಸಕೋಟೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




