ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಧಾರಣ ತೂಕದ ಮತ್ತು ವಿಪರೀತ ಕಡಿಮೆ ತೂಕದ ಮಕ್ಕಳ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಆರೋಗ್ಯ ತಪಾಸಣಾ ಶಿಬಿರ
ಬಂಟ್ವಾಳ: ಸುಮಾರು 15 ವರ್ಷಗಳ ಹಿಂದೆ ಕೇಂದ್ರ ಸರಕಾರ ಅನುಷ್ಠಾನಕ್ಕೆ ತಂದ ಹಲವು ಜನಾನುರಾಗಿ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ವರದಾನವಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸಾಧಾರಣ ತೂಕದ ಮತ್ತು ವಿಪರೀತ ಕಡಿಮೆ ತೂಕದ ಮಕ್ಕಳ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಳ್ಳಿ ಪ್ರದೇಶಗಳಲ್ಲಿ ಜಾರಿಗೆ ಬಂದ ಅಂಗನವಾಡಿ ವ್ಯವಸ್ಥೆಯಿಂದ ಗರ್ಭಿಣಿಯರ ಬಾಣಂತಿಯರ ಮತ್ತು ಸಣ್ಣ ಮಕ್ಕಳ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಲು ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಾಣಿ ಗ್ರಾಮ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯೇನಪೋಯ ಆಯುರ್ವೇದಿಕ್ ಕಾಲೇಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಜಡ್ತಿಲ ಪ್ರಹ್ಲಾದ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಯೆನಪೋಯ ಆಯುರ್ವೇದಿಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಲಕ್ಷ್ಮೀಶ ಉಪಾಧ್ಯಾಯರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶಿಬಿರದ ಮಹತ್ವದ ಬಗ್ಗೆ ತಿಳಿಸಿದರು.
ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಅಭಿವೃದ್ಧಿ ಅಧಿಕಾರಿ ಗಿರಿಜಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಉದಯ ಕುಮಾರಿ ಉಪಸ್ಥಿತರಿದ್ದರು.
ಅಂಗನವಾಡಿ ಮೇಲ್ವಿಚಾರಕಿ ರೂಪಕಲಾ ಸ್ವಾಗತಿಸಿದರು. ಭಾರತ್ ಸ್ಕೌಟ್ಸ್ ಮತ್ತು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಮ್ಮರಗಿ ಶರಣಪ್ಪ ವಂದಿಸಿದರು. ಅಂಗನವಾಡಿ ಮೇಲ್ವಿಚಾರಕಿ ರೋಹಿಣಿ ಕಾರ್ಯಕ್ರಮ ನಿರ್ವಹಿಸಿದರು.




