ಬಾಂಗ್ಲಾದೇಶ ಹಿಂಸಾಚಾರ ಖಂಡಿಸಿ ತ್ರಿಪುರದಲ್ಲಿ ಮಸೀದಿಗಳ ಧ್ವಂಸ: ಪೊಲೀಸರಿಂದ ರಕ್ಷಣೆ
ಅಗರ್ತಲಾ: ಉತ್ತರ ತ್ರಿಪುರದ ಚಮ್ಟಿಲ್ಲಾ ಪ್ರದೇಶದಲ್ಲಿ ದುಷ್ಕರ್ಮಿಗಳು ಮಸೀದಿಯನ್ನು ಧ್ವಂಸಗೊಳಿಸಿದ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದು, ತ್ರಿಪುರಾ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿನ ಮಸೀದಿಗಳಿಗೆ ರಕ್ಷಣೆ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
“ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರ್ಯಾಲಿ ನಡೆಸಿದರು. ರ್ಯಾಲಿಯಲ್ಲಿ ಜನರ ಗುಂಪೊಂದು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯ ಬಾಗಿಲಿಗೆ ಕಲ್ಲು ಎಸೆದು ಹಾನಿಗೊಳಿಸಿದ್ದು, ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಾನುಪಾದ ಚಕ್ರವರ್ತಿ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡದಂತೆ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ದುರ್ಗಾಪೂಜೆ ಸಂದರ್ಭದಲ್ಲಿ ವರದಿಯಾದ ಹಿಂದೂಗಳ ಮೇಲಿನ ಸರಣಿ ದಾಳಿಗಳ ವಿರುದ್ಧ ಪ್ರತಿಭಟಿಸಲು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಡೆಸಿದ ರ್ಯಾಲಿಯಲ್ಲಿ ಮಂಗಳವಾರ ಸಂಜೆ ಹಿಂಸಾಚಾರ ಸಂಭವಿಸಿದೆ.
ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡುತ್ತಿದ್ದಾರೆ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹರಡುತ್ತಿದ್ದಾರೆ. ಇಂತಹ ಸಂದೇಶಗಳನ್ನು ನಂಬಬೇಡಿ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಎಲ್ಲರಿಗೂ ಮನವಿ ಎಂದು ತ್ರಿಪುರಾ ಪೊಲೀಸರು ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವ ಮತ್ತು ಶಾಂತಿಯುತ ವಾತಾವರಣಕ್ಕೆ ಭಂಗ ತರಲು ಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.