ಮಾಣಿ ಸರ್ಕಾರಿ ಶಾಲೆಯಲ್ಲಿ
ವಲಯ ಮಟ್ಟದ ತರಬೇತಿ ಕಾರ್ಯಕ್ರಮ
ಮಾಣಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆದ ಅದೆಷ್ಟೋ ಮಂದಿ ರಾಷ್ಟ್ರ ಮಟ್ಟದವರೆಗೆ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮಾಡಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದು ದಾಖಲೆಯಾಗಿದೆ. ಸರಕಾರಿ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳನ್ನು ತುಲನೆ ಮಾಡಿ ನೋಡುವುದು ಸಮಂಜಸವಲ್ಲ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಸರ್ಕಾರಿ ಶಾಲೆಯಲ್ಲಿ ಜರಗಿದ ವಲಯ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗಳ ಅಭಿವೃದ್ಧಿ ಹಾಗೂ ಜನಪ್ರತಿನಿಧಿಗಳ, ಪೋಷಕರ, ಶಿಕ್ಷಕರ ಮತ್ತು ಮಕ್ಕಳ ಬಾಂಧವ್ಯದ ವೃದ್ಧಿಯ ದೃಷ್ಟಿಯಿಂದ ತರಬೇತಿ ಕಾರ್ಯಕ್ರಮಗಳು ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ರವರು, ಸರ್ಕಾರಿ ಶಾಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ನಡೆಸುತ್ತಿರುವ ತರಬೇತಿ ಕಾರ್ಯಕ್ರಮಗಳಿಗೆ ಬಹಳ ಮಹತ್ವ ಇದೆ. ಶಾಲಾಭಿವೃದ್ಧಿ ಸಮಿತಿ ಮತ್ತು ಪೋಷಕರು ಈ ನಿಟ್ಟಿನಲ್ಲಿ ಶಿಕ್ಷಕರ ಜೊತೆಗೆ ಕೈಜೋಡಿಸುವ ಅಗತ್ಯ ಇದೆ ಎಂದು ಹೇಳಿದರು. ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ನೇರಳಕಟ್ಟೆ, ಇಡ್ಕಿದು ಮತ್ತು ಬಂಟ್ರಿಂಜ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರುಗಳಾದ ಅಬೂಬಕ್ಕರ್, ಮಲ್ಲಿಕಾ, ಶೋಭಾ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕ ನಾಗೇಶ್ ಸ್ವಾಗತಿಸಿದರು.