ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಸಂಗ್ರಹವಾಗಿರುವ ಘನತ್ಯಾಜ್ಯವನ್ನು ತೆರವು ಕಾಮಗಾರಿಗೆ ಚಾಲನೆ: ಹೈಕೋರ್ಟ್‌ಗೆ ಮ.ನ.ಪಾ ಹೇಳಿಕೆ
ಬೆಂಗಳೂರು: ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯವನ್ನು ತೆರವುಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ತಿಳಿಸಿದೆ.
ಈ ವಿಚಾರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಪಾಲಿಕೆ ಪರ ಹಾಜರಾದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿದರು.




