ಪ್ರಾಧ್ಯಾಪಕಿಯ ಬಗ್ಗೆ ಮಾನಹಾನಿಕರ ಪೋಸ್ಟರ್, ಮೂವರು ಆರೋಪಿಗಳ ಬಂಧನ
ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆ, ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ, ಪ್ರಕಾಶ್ ಶೆಣೈ (44), ಬಂಟ್ವಾಳದ ಸಿದ್ದಕಟ್ಟೆ, ಮೇಗಿನ ಉಳಿರೋಡಿ ನಿವಾಸಿ, ಪ್ರದೀಪ್ ಪೂಜಾರಿ (36), ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಸೀತಾನದಿ ನಡ್ಪಾಲು ನಿವಾಸಿ ತಾರಾನಾಥ ಬಿ ಎಸ್ ಶೆಟ್ಟಿ, (32) ಬಂಧಿತ ಆರೋಪಿಗಳು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರತಿಷ್ಠಿತ ಕಾಲೇಜಿನಲ್ಲಿ ಆರೋಪಿಗಳು ಕಾಲೇಜಿನ ಸಂಚಾಲಕ ಹಾಗೂ ಪ್ರಾಧ್ಯಾಪಕರಾಗಿ, ಕಾರ್ಯನಿರ್ವಹಿಸುತ್ತಿದ್ದು, ಕಾಲೇಜಿನಲ್ಲಿ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆ ನಡೆದಿದೆ.
ಈ ವಿಚಾರವಾಗಿ ಕಾಲೇಜಿನ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರವನ್ನು, ಪೋಸ್ಟರ್ ಗಳನ್ನು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು.




