ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ ಪ್ರಕರಣ: ಡಿ.ಕೆ. ಶಿವಕುಮಾರ್, ಇತರರಿಗೆ ಜಾಮೀನು ಮಂಜೂರು
ಬೆಂಗಳೂರು: ಕೃಷಿ ಕಾಯ್ದೆಗಳ ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿ 2021ರ ಜನವರಿ 20ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪದಡಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್, ‘ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ ನಡೆಸಿದ್ದೆವು. ಹತ್ತು ಸಾವಿರ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನನ್ನ ಹಾಗೂ ಸಲೀಂ ಅಹಮ್ಮದ್, ಈಶ್ವರ ಖಂಡ್ರೆ, ಮಂಜುನಾಥ್, ಶಫಿವುಲ್ಲಾ, ಬಸನಗೌಡ ಬಾದರ್ಲಿ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿತ್ತು’ ಎಂದರು.
‘ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ವಾರೆಂಟ್ ಜಾರಿಗೆ ಆದೇಶಿಸಿತ್ತು. ಕಾನೂನನ್ನು ಗೌರವಿಸಿ, ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದೇವೆ’ ಎಂದು ಹೇಳಿದರು.




