ಜೂನ್ 25. ಸುಳ್ಯ ನ್ಯಾಯಾಲಯದಲ್ಲಿ ಮೇಗಾ ಲೋಕ ಅದಾಲತ್ ಕಾರ್ಯಕ್ರಮ
ಸುಳ್ಯ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯದಾದ್ಯಂತ ಜೂನ್ 25ರಂದು ಲೋಕ್ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದರ ಅಂಗವಾಗಿ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಜೂನ್ 25ರಂದು ಸುಳ್ಯ ನ್ಯಾಯಾಲಯದಲ್ಲಿ ಮೆಗಾ ಲೋಕ್ ಅದಾಲತ್ ನಡೆಯಲಿದ್ದು ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ್ ಎ ಇಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ನ್ಯಾಯಾಲಯದ ಆವರಣದಲ್ಲಿ ಜೂನ್ 9ರಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು ಲೋಕ್ ಅದಾಲತ್ ನಲ್ಲಿ ರಾಜಿ ಆಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆ ಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜಿ ಆಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನೆ ಯನ್ನು ಹೊರತುಪಡಿಸಿ )
ಈ ಎಲ್ಲ ವಿಷಯಗಳ ಕುರಿತು ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು ಎಂದು ಅವರು ಹೇಳಿದರು.
ಈ ರೀತಿಯ ಲೋಕ್ ಅದಾಲತ್ ಸೌಲಭ್ಯದಿಂದ ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದವು ತೀರ್ಮಾನವಾಗುತ್ತದೆ. ಅದೇ ರೀತಿ ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ.
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಆದ್ದರಿಂದ ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಈ ರೀತಿಯ ವಿಶೇಷ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬಹುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ್ ಮಾತನಾಡಿ ಸಾರ್ವಜನಿಕರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನೀಡುವ ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥ ಪಡಿಸಿಕೊಂಡು ಸಂತುಷ್ಟ ಬದುಕು ಸಾಗಿಸುವಂತೆ ಕರೆನೀಡಿ ಲೋಕ್ ಅದಾಲತ್ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಜಗದೀಶ್, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್ ಉಪಸ್ಥಿತರಿದ್ದರು.




