ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಳ:
ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿ ನೆರವು ಪಡೆಯುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿ ಆರೋಗ್ಯ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದೆ.
ಶಾಪಿಂಗ್ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ನಿರ್ದೇಶನ ನೀಡಿದ್ದಾರೆ.
ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ನಾಗರಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಿದ್ದಾರೆ.




