November 21, 2024

ಮಸೂದ್, ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ
ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಘೋಷಣೆ

0

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೊನ್ನೆ ನಡೆದ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲಾಡಳಿತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಶಾಂತಿ ಸಭೆಯನ್ನು ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿವೆ. ಈ ಮಧ್ಯೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ಸ್ವಗೃಹದಲ್ಲಿ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ.

ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮಸೂದ್ ಮತ್ತು ಫಾಝಿಲ್‌ನ ಕುಟುಂಬಸ್ಥರಿಗೆ ತಲಾ 30 ಲಕ್ಷ ರೂ. ಸಹಾಯ ಧನ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೆ ಪ್ರಕರಣದ ಬಗ್ಗೆ ಕುಟುಂಬಸ್ಥರಿಗೆ ಕಾನೂನಿನ ನೆರವು ನೀಡಲು ನಿರ್ಣಯಿಸಲಾಯಿತು.

ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲೆಂದು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಸಭೆಯಲ್ಲಿ ಸಾಂತ್ವನ ನೀಡಿದರು.

ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಕೆ. ಅಶ್ರಫ್, ಹನೀಫ್ ಹಾಜಿ ಬಂದರ್, ಸೈಯದ್ ಅಹ್ಮದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!