ಮಹಾರಾಷ್ಟ್ರ: ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಡ:
10 ಮಂದಿ ಕೋವಿಡ್ ರೋಗಿಗಳು ಮೃತ್ಯು, 12 ಮಂದಿ ಗಾಯ
ಮಹಾರಾಷ್ಟ್ರ: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದ ಕನಿಷ್ಠ 10 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ರೋಗಿಗಳನ್ನು ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಪಕ್ಕದ ಇತರ ವಾರ್ಡ್‌ಗಳಿಗೆ ಹರಡುತ್ತಿರುವ ಬೆಂಕಿಯನ್ನು ನಂದಿಸಲು ಪ್ರಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಕಿ ಅನಾಹುತದಲ್ಲಿ ಇನ್ನಷ್ಟು ರೋಗಿಗಳು ಸಿಲುಕಿಕೊಂಡಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ಹಿರಿಯ ಪೊಲೀಸ್, ಜಿಲ್ಲಾ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಅಗ್ನಿ ಅನಾಹುತಕ್ಕೆ ನಿಖರ ಕಾರಣ ಸದ್ಯ ತಿಳಿದು ಬಂದಿಲ್ಲ.





