ಇಶ್ರಾತ್ ಜಹಾನ್ ಎನ್‌ಕೌಂಟರ್ ಪ್ರಕರಣದಲ್ಲಿ: ಸಿಬಿಐ ತನಿಖಾ ತಂಡದ ನೇತೃತ್ವ ವಹಿಸಿದ್ದ ಐಪಿಎಸ್ ಅಧಿಕಾರಿಯ ವಜಾ
ಅಹಮದಾಬಾದ್: ಇಶ್ರಾತ್ ಜಹಾನ್ ಎನ್‌ಕೌಂಟರ್ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡದ ನೇತೃತ್ವ ವಹಿಸಿದ್ದ ಗುಜರಾತ್ ಕೇಡರ್‌ನ ಐಪಿಎಸ್ ಅಧಿಕಾರಿ ಸತೀಶ್ ಚಂದ್ರ ವರ್ಮಾ ಅವರನ್ನು ಅವರ ನಿವೃತ್ತಿಗಿಂತ ಒಂದು ತಿಂಗಳು ಮೊದಲೇ ಸೇವೆಯಿಂದ ವಜಾಗೊಳಿಸಲಾಗಿದೆ. ಇದೇ 30ರಂದು ಅವರ ನಿವೃತ್ತಿ ನಿಗದಿಯಾಗಿತ್ತು.
ಇಲಾಖಾ ಪ್ರಕ್ರಿಯೆಯ ವಿವಿಧ ಕಾರಣಗಳಿಗಾಗಿ ಅವರನ್ನು ಸರ್ಕಾರ ಆಗಸ್ಟ್ 30ರಂದು ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ. ‘ದೇಶದ ಅಂತರರಾಷ್ಟ್ರೀಯ ಸಂಬಂಧಗಳನ್ನು ಹದಗೆಡಿಸುವ ನಿಟ್ಟಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ’ ಕಾರಣವೂ ಸೇರಿದಂತೆ ಹಲವು ಕಾರಣಗಳಿಗಾಗಿ ವರ್ಮಾ ಅವರನ್ನು ವಜಾಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ವರ್ಮಾ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ರಾಜ್ಯ ಸರ್ಕಾರದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ‘ಈ ವಿಷಯ ನ್ಯಾಯಾಲಯದಲ್ಲಿರುವ ಕಾರಣ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ವರ್ಮಾ ಅವರ ನಿಕಟವರ್ತಿಯೊಬ್ಬರು ತಿಳಿಸಿದ್ದಾರೆ.




