ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನ
ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.
2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.




