ಕಾರವಾರ: ತೂಗು ಸೇತುವೆಯ ಮೇಲೆ ಕಾರು ಚಲಾಯಿಸಿದ ಅಪರಿಚಿತರು
ಕಾರವಾರ: ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಸೋಮವಾರ ಕಾರನ್ನು ಚಲಾಯಿಸಿಕೊಂಡು ಬಂದಿದ್ದಾರೆ.
ಇದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಸ್ಥಳದಲ್ಲಿದ್ದ ಪ್ರವಾಸಿಗರು ದೂರಿದ್ದಾರೆ.
ಸೇತುವೆಯಲ್ಲಿ ಸಾಗಿ ಸುಮಾರು ಮುಂದೆ ಬಂದ ಕಾರನ್ನು ಸ್ಥಳೀಯರು ತಡೆದು, ಬಂದ ದಾರಿಗೆ ಹಿಂದಕ್ಕೇ (ರಿವರ್ಸ್ ಗೇರ್‌ನಲ್ಲಿ) ಕಳುಹಿಸಿದ್ದಾರೆ. ಗುಜರಾತ್‌ನ ಮೊರ್ಬಿಯಲ್ಲಿ ತೂಗುಸೇತುವೆ ಕುಸಿದು ನೂರಾರು ಜನ ಮೃತಪಟ್ಟ ಸಂಗತಿಯಿಂದಲೂ ಕೆಲವರು ಎಚ್ಚೆತ್ತುಕೊಂಡಿಲ್ಲ. ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರು, ಸ್ಥಳೀಯರು ಪ್ರಶ್ನಿಸಿದ್ದಾರೆ.
ಪ್ರಸಿದ್ಧ ಯಾತ್ರಾಸ್ಥಳ ಜೊಯಿಡಾ ತಾಲ್ಲೂಕಿನ ಉಳವಿಯಿಂದ ಬರುವ ಅನೇಕ ಮಂದಿ ಶಿವಪುರದ ತೂಗು ಸೇತುವೆಗೆ ಭೇಟಿ ನೀಡುತ್ತಾರೆ. ಅಲ್ಲಿನ ಪ್ರಾಕೃತಿಕ ಸೌಂದರ್ಯದ ಕಾರಣ ಪ್ರವಾಸಿ ತಾಣವಾಗಿಯೂ ಮಾರ್ಪಟ್ಟಿದೆ. ಹಲವು ಗ್ರಾಮಸ್ಥರಿಗೆ ಇದು ದೈನಂದಿನ ಜೀವನದ ಅಗತ್ಯ ಸೌಕರ್ಯವಾಗಿದೆ.