ಕಡಬ: ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆ ದಾಳಿ
ಕಡಬ: ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಎಂಬಲ್ಲಿ ನಡೆದಿದೆ.
ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾಜೆ ಅಂತಿಬೆಟ್ಟು ಪ್ರದೇಶದಲ್ಲಿ ಲಕ್ಷ್ಮಣ ಗೌಡ ಎಂಬರಿಗೆ ಸೇರಿದ ದನ ಮತ್ತು ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ದನಗಳೂ ಗಂಭೀರವಾಗಿ ಗಾಯಗೊಂಡಿದೆ.
ಈ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿಂದ ಸುಮಾರು 20 ಕ್ಕೂ ಹೆಚ್ಚು ದನಗಳ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಗ್ರಾಮದ ನಿವಾಸಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮರಿ ಹೊಂದಿರುವ ಚಿರತೆ ದಾಳಿ ಮಾಡುತ್ತಿರುವುದಾಗಿ ಗ್ರಾಮದಲ್ಲಿ ಸುದ್ದಿ ಹಬ್ಬಿದ್ದು, ಅರಣ್ಯ ಅಧಿಕಾರಿಗಳ ಪರಿಶೀಲನೆಯ ಬಳಿಕ ನಿಜ ಸಂಗತಿ ತಿಳಿದು ಬರಬೇಕಾಗಿದೆ.
ಇನ್ನು ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕಳೆದ ಎರಡು ತಿಂಗಳ ಹಿಂದೆಯೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಆದ್ರೆ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಚಿರತೆ ಮತ್ತೆ ದಾಳಿ ಮಾಡಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಇದೇ ಭಾಗದಲ್ಲಿ ಕೆ .ಎಫ್ .ಡಿ. ಸಿ ಗೆ ಸೇರಿದ ರಬ್ಬರ್ ಮರಗಳಿದ್ದು, ರಬ್ಬರ್ ಟ್ಯಾಪಿಂಗ್ ಮಾಡಲು ಬರುವ ಕಾರ್ಮಿಕರು ಜೀವ ಭಯದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿಂದೆ ಇದೇ ಗ್ರಾಮದ ಕೋಕಲ ಎಂಬಲ್ಲಿ ರಾಘವ ಪೂಜಾರಿ ಎಂಬವರಿಗೆ ಸೇರಿದ ಆಡಿನ ಮೇಲೆ ಚಿರತೆಯೊಂದು ಏಕಾಏಕಿ ಪೊದೆಯಿಂದ ಹಾರಿ ದಾಳಿ ಮಾಡಿ ಅರಣ್ಯ ಪ್ರದೇಶಕ್ಕೆ ಪರಾರಿಯಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಬ್ರಹ್ಮಣ್ಯ ಉಪವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು ಘಟನೆ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.




