ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರಿಡಲು ನಿರ್ಧಾರ: ಬಸವರಾಜ ಬೊಮ್ಮಾಯಿ
ಶಿವಮೊಗ್ಗ: ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಶಿವಮೊಗ್ಗ. ಶಿವಮೊಗ್ಗ ನಗರಕ್ಕೆ ಉತ್ತಮ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.
ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ದಿ ಹೊಂದಲಿದೆ.
ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು.




