ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮಂಡನೆ: ಆರಗ ಜ್ಞಾನೇಂದ್ರ
ಬೆಂಗಳೂರು: ಡಿಸೆಂಬರ್ 13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಬೆಳಗಾವಿಯಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಅಧಿವೇಶನದಲ್ಲಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಗಳಿದ್ದು, ಮಸೂದೆ ಅಂಗೀಕರಿಸಲು ಸರ್ಕಾರ ಉತ್ಸುಕವಾಗಿದೆ ಮತ್ತು ಡಿಸೆಂಬರ್‌ನೊಳಗೆ ಕರಡು ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ ಮತ್ತು ಜಾರ್ಖಂಡ್’ನಲ್ಲಿ ಈಗಾಗಲೇ ಇಂತಹ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧ್ಯಯನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಕರಡು ಸಿದ್ಧಪಡಿಸಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಚಿಂತನೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ, ಸಂತೋಷ್ ಗುರೂಜಿ, ಸಿದ್ದಲಿಂಗ ಸ್ವಾಮಿ ಮತ್ತು ಪ್ರಣವಾನಂದ ಸ್ವಾಮಿ ಸೇರಿದಂತೆ ಹಲವು ಮಠಗಳ ಮುಖ್ಯಸ್ಥರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಧಾರ್ಮಿಕ ಮತಾಂತರವನ್ನು ನಿಷೇಧಿಸುವಂತೆ ಒತ್ತಾಯಿಸಿದರು.
ಹಿಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗದಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದ್ದರು ಮತ್ತು ಅವರ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಿದ್ದರು.





