ಬಂಟ್ವಾಳ: ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ: ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು
ಬಂಟ್ವಾಳ: ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.
ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಣಿ ಜಂಕ್ಸನ್ ನಲ್ಲಿ ಆಕ್ಟೀವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದೆ. ಕಾಂಗ್ರೆಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಲ್ಲದೆ, ಇವರೆಲ್ಲರೂ ಮಾಣಿ ನಾಗು ಸಹಚರರು ಎಂದು ಕೂಡ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರ್ ನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಎಸ್ಪಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.




