ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ
ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ ತಡರಾತ್ರಿ ನಡೆದಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
ನಗರದ ಕಮಲಾಪುರ ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಹತ್ಯೆ ಹಿಂದಿನ ಕಾರಣ ಏನು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಗುಪ್ತಾ ಅವರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ ಮಾಡಲಾಗಿದೆ. ಡಾಗ್ ಸ್ಕ್ವಾಡ್ ಹಾಗೂ ಬೆರಳಚ್ಚು ತಜ್ಞರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




