ಬೆಳ್ತಂಗಡಿ: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಜೂನ್ 16ರಂದು ತೀರ್ಪು ಪ್ರಕಟ
ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.
ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪು ಅನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್ 16ರಂದು ಪ್ರಕಟಿಸಲಿದೆ.
ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅವರು 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರು ದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು.
ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.
ಶಂಕಿತ ಆರೋಪಿ, ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.
ಪೊಲೀಸರು ಆತನನ್ನು ಬಂಧಿಸಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಂತೋಷ್ ರಾವ್ ಸುಮಾರು ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮರೆಸಿಕೊಂಡಿದ್ದ.




