ಕರಾವಳಿ ಭಾಗದಲ್ಲಿ ಚಂಡಮಾರುತದ ಭೀತಿ: ಸಮುದ್ರಕ್ಕೆ ಇಳಿಯದಂತೆ ಸೂಚನೆ
ಉಡುಪಿ : ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗಾಳಿ ಮಳೆ ಸುರಿಯಲಿದ್ದು ಸಮುದ್ರ ಪ್ರಕ್ಷುಬ್ಧವಾಗಿರಲಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾಮ್ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ.
ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆ ಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಜಿಲ್ಲಾಡಳಿತದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕ ರಿಗೆ ಕೆಲವು ಸೂಚನೆಗಳನ್ನು ನೀಡಿದ್ದು, ಅದನ್ನು ಪಾಲಿಸುವಂತೆ ತಿಳಿಸಲಾಗಿದೆ.




