March 13, 2026

ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣ: ಆರು ಆರೋಪಿಗಳು ದೋಷಿ, ಐದು ಮಂದಿಗೆ ಖುಲಾಸೆ: ತೀರ್ಪು ನೀಡಿದ ಕೇರಳದ ವಿಶೇಷ ಎನ್‌ಐಎ ನ್ಯಾಯಾಲಯ

0
IMG-20230712-WA0024.jpg

ಕೇರಳ: ಪ್ರಾಧ್ಯಾಪಕರೊಬ್ಬರ ಕೈ ಕತ್ತರಿಸಿದ ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ಘೋಷಿಸಿದ್ದು, ಐದು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಕೇರಳದ ವಿಶೇಷ ಎನ್‌ಐಎ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಎಂ.ಕೆ. ನಾಸರ್, ಸಾಜಿಲ್, ನಜೀಬ್, ಎಂ.ಕೆ. ನೌಶಾದ್, ಪಿ.ಪಿ. ಮೊಹಮದ್ ಕುಂಜು ಮತ್ತು ಪಿ.ಎಂ. ಅಯೂಬ್ ಅವರನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ ಘೋಷಿಸಿದೆ. ಇವರೆಲ್ಲರೂ ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಾಗಿದ್ದಾರೆ.

ಕೇರಳದ ಇಡುಕ್ಕಿ ಜಿಲ್ಲೆಯ ತೊಡುಪುಳದ ನ್ಯೂಮನ್‌ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಟಿ.ಜೆ. ಜೋಸೆಫ್‌ ಅವರ ಕೈಯನ್ನು 2010ರ ಜುಲೈ 4ರಂದು ಕತ್ತರಿಸಲಾಗಿತ್ತು.

ಬಿ.ಕಾಂ. ಸೆಮಿಸ್ಟರ್‌ ಪ್ರಶ್ನೆಪತ್ರಿಕೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಪ್ರಶ್ನೆ ಕೇಳಲಾಗಿದೆ ಎಂಬ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ 2015 ಮೇ 1 ರಂದು 13 ಮಂದಿಯನ್ನು ಅಪರಾಧಿಗಳೆಂದು ಪರಿಗಣಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು.

ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇತರ 18 ಮಂದಿಯನ್ನು ಸೂಕ್ತ ಸಾಕ್ಷಾಧಾರಗಳಿಲ್ಲ ಎಂಬ ಕಾರಣಕ್ಕೆ ನ್ಯಾಯಾಧೀಶ ಪಿ. ಶಶಿಧರನ್‌ ಅವರು ಖುಲಾಸೆಗೊಳಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು, 30 ಪ್ರಾಸಿಕ್ಯೂಷನ್‌ ಸಾಕ್ಷಿಗಳ ಮತ್ತು ನಾಲ್ವರು ಪರ ಸಾಕ್ಷಿಗಳ ವಿಚಾರಣೆ ನಡೆಸಿತ್ತು. ಅಂತಿಮವಾಗಿ ನ್ಯಾಯಾಲಯ 13 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು.

Leave a Reply

Your email address will not be published. Required fields are marked *

error: Content is protected !!