ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ವಶಕ್ಕೆ

ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31) ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್(26) ಬಂಧಿತರು.
ಬಂಧಿತರಿಂದ ಒಟ್ಟು 35 ಗ್ರಾಂ ತೂಕದ ರೂ. 1,75,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 600 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ಆಗಬಹುದು ಎಂದು ಅಂದಾಜಿಸಲಾಗಿದೆ.
ಇನ್ನು ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದನು.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.