ಪ್ರಚೋದನಕಾರಿ ಭಾಷಣ, ಕೋಮು ಸಾಮರಸ್ಯಕ್ಕೆ ಧಕ್ಕೆ: ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ನ ದ.ಕ.ಜಿಲ್ಲಾ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮೇಲೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಅ.16ರಂದು ಶರಣ್ ಪಂಪ್‌ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದಾರೆ.
ಈ ಕೃತ್ಯವು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.




