ಅನಾಥಾಶ್ರಮಗಳಿಗೆ ಹೋಗಿ ಅಲ್ಲಿನ ಮಕ್ಕಳ ಮುಂದೆ ತಮ್ಮ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧ:
ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಅನಾಥಾಶ್ರಮಗಳಿಗೆ ಹೋಗಿ ಅಲ್ಲಿನ ಮಕ್ಕಳ ಮುಂದೆ ತಮ್ಮ ಮಕ್ಕಳ ಹುಟ್ಟುಹಬ್ಬ ಮತ್ತಿತರ ಆಚರಣೆಗಳನ್ನು ಅದ್ದೂರಿಯಿಂದ ಆಚರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಷೇಧಕ್ಕೆ ಕಾರಣವೇನು ಎಂಬ ಅಂಶಗಳು ಮುಂದಿವೆ.
ಕರ್ನಾಟಕ ಸರ್ಕಾರದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಈ ಸಂಬಂಧಿತ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (Celebrities ಇತ್ಯಾದಿ) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸುವ ಕುರಿತು ಹೊರಡಿಸಿರುವ ಕುರಿತ ಸುತ್ತೋಲೆ ಇದಾಗಿದೆ ಎಂದು ಹೇಳಲಾಗಿದೆ.
ಸಿನಿಮಾ ರಂಗ, ಕ್ರೀಡೆ, ಕಾರ್ಪೋರೇಟ್ ಸಂಸ್ಥೆಗಳು, ಮಠಾಧೀಶರು, ರಾಜಕೀಯ ರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಜನಪ್ರಿಯ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಮಕ್ಕಳ ಜನ್ಮ ದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ತಿಳಿದು ಬಂದಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಸರ್ಕಾರಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಬಾಲನ್ಯಾಯ ಮಂಡಳಿ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ ಎಂದು ಹೇಳಲಾಗಿದೆ.