ಮಂಗಳೂರು: ಅಕ್ರಮ ಎಂಡಿಎಂಎ ಮಾರಾಟ: ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳ ಮೂಲದ ಮುಸ್ತಫಾ (37) ಮತ್ತು ಶಂಶುದ್ದೀನ್ ಎ (38) ಬಂಧಿತ ಆರೋಪಿಗಳು.
ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 95,000 ರೂ ಎಂದು ಅಂದಾಜಿಸಲಾಗಿದೆ.





