ಮಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ: ಮೂವರ ಬಂಧನ
ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಜೋಡಿ ಮೇಲೆ ಯುವಕರ ತಂಡವೊಂದು ಕದ್ರಿ ಪಾರ್ಕ್ ಬಳಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೇರಳಕಟ್ಟೆಯಿಂದ ಜೊತೆಯಾಗಿ ಬಸ್‌ನಲ್ಲಿ ಮಂಗಳೂರಿಗೆ ಬಂದಿದ್ದರು. ಅದೇ ಬಸ್‌ನಲ್ಲಿ ಅವರನ್ನು ಹಿಂಬಾಲಿಸುತ್ತಾ ಬಂದ ತಂಡ ಇವರು ಕದ್ರಿ ಪಾರ್ಕ್‌ಗೆ ಹೋಗುತ್ತಿದ್ದಾಗ ಪಾರ್ಕ್ ರಸ್ತೆಯಲ್ಲೇ ತಡೆದು ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವೇಳೆ ಹಲ್ಲೆಗೊಳಗಾದ ವಿದ್ಯಾರ್ಥಿಗಳು ರಿಕ್ಷಾದಲ್ಲಿ ಹೋಗಲು ಯತ್ನಿಸಿದಾಗ ಮತ್ತೆ ತಂಡ ಅವರನ್ನು ಎಳೆದಾಡಿ ಗೂಂಡಾಗಿರಿ ನಡೆಸಿದೆ ಎಂದು ತಿಳಿದು ಬಂದಿದೆ. ಅಷ್ಟರಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಧ್ಯಾರ್ಥಿಗಳನ್ನು ರಕ್ಷಿಸಿದ್ದು, ಹಲ್ಲೆ ಮುಂದಾಗಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.





