ಮಂಗಳೂರು: ಆಟೋ ರಿಕ್ಷಾದಲ್ಲಿ ಡ್ರಗ್ಸ್ ಮಾರಾಟ: ಓರ್ವನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಮಂಗಳೂರು: ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಬಜಾಲ್ ನಿವಾಸಿ ತೌಸೀಫ್ ಅಲಿಯಾಸ್ ತೌಚಿ (23) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿಯಿಂದದ 45 ಸಾವಿರ ರೂ ಮೌಲ್ಯದ 9 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1.55 ಲಕ್ಷ ರೂ ಆಗಬಹುದು ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ನಡೆಸಲಾಯಿತು.