ಅಯೋಧ್ಯೆ ರಾಮಲಲ್ಲಾನ ಪ್ರತಿಷ್ಠಾಪನೆ: ರಾಜ್ಯದಲ್ಲಿ ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಜ. 22 ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯಲಿದ್ದು ಈ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಪೊಲೀಸರಿಗೆ ಸಿ.ಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.
ಸಾಮಾಜಿಕ ಜಾಲತಾಣ “ಎಕ್ಸ್’ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ಕೂಡಲೇ ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು ಇಂತಹ ಕೃತ್ಯಗಳು ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.




