ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ: ಚಾಲಕ, ಕ್ಲೀನರ್ ಸಹಿತ 40 ಹಸುಗಳು ಸಾವು
ಹೈದರಾಬಾದ್: ಮಿತಿಮೀರಿದ ವೇಗದಿಂದಾಗಿ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಾರಿ ಚಾಲಕ, ಕ್ಲೀನರ್ ಹಾಗೂ 40 ಹಸುಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿರುವುದಾಗಿ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಸಮೀಪ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಚಾಲಕ ಮತ್ತು ಕ್ಲೀನರ್ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ವರದಿ ತಿಳಿಸಿದೆ.
ಹಸುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ.





