ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ: ಮೂವರ ಬಂಧನ
ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಫೆ.27ರಂದು ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿರುವುದು ವರದಿಯಾಗಿದೆ.
ಮುನವ್ವರ್, ಇಲ್ತಾಜ್ ಮತ್ತು ಶಫಿ ನಾಶಿಪುಡಿ ಎಂಬುವರನ್ನು ಬಂಧಿತರು ಎಂದು ಗುರುತಿಸಲಾಗಿದೆ.
ಆರ್.ಟಿ.ನಗರದ ಮುನಾವರ್, ಇಲ್ತಾಜ್ ದಿಲ್ಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವರು ಎಂದು ಹೇಳಲಾಗಿದೆ.
ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರ ಘಟನೆ ನಡೆದ ದೃಶ್ಯಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿತ್ತು. ಎಫ್‌ಎಸ್‌ಎಲ್ ವರದಿ ದೃಢವಾದ ಹಿನ್ನೆಲೆ ಮೂವರ ಬಂಧನವಾಗಿದೆ ಎನ್ನಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.




