ಅಡ್ಯಾರ್: ಬೊಂಡ ಕುಡಿದು 137 ಮಂದಿ ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿಗೆ ಬೀಗ ಜಡಿದ ಅಧಿಕಾರಿಗಳು
ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.
ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಎ.8ರಂದು ಬೊಂಡ ನೀರು ಖರೀದಿಸಿ ಮನೆಗೆ ಕೊಂಡು ಹೋಗಿದ್ದರು ಎನ್ನಲಾಗಿದೆ. ಬೊಂಡ ನೀರು ಸೇವಿಸಿದ 137 ಮಂದಿ ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ಅಸ್ವಸ್ಥಗೊಂಡವರು ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರೋಡ್ ಪರ್ಲಿಯ ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್, ಯುನಿಟಿ, ಕಣಚೂರು, ಯೆನೆಪೋಯ, ಇಂಡಿಯಾನ, ಕೊಲಾಸೊ ಹಾಗೂ ಇತರ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರು.
ಬೊಂಡ ನೀರು ಕುಡಿದು ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವವರನ್ನು ಆರೋಗ್ಯ ಅಧಿಕಾರಿಗಳ ತಂಡ ಭೇಟಿಯಾಗಿ ಅವರಿಂದ ಮಾಹಿತಿ ಪಡೆದಿದೆ.
ಒಟ್ಟು 137 ಮಂದಿ ಬೊಂಡ ನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು, ಹೊರರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ದಾಖಲಾಗಿದ್ದರು. ಈ ಪೈಕಿ ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.





