ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಹಂಚಿದ್ದು ನಾನಲ್ಲ: ಅಜ್ಞಾತ ಸ್ಥಳದಿಂದ ವೀಡಿಯೊ ಮಾಡಿಬಿಟ್ಟ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ಹದಿನೈದು ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನವರಿಗೆ ನಾನು ವಿಡಿಯೋ ಕೊಟ್ಟಿಲ್ಲ’ ಎಂದಿರುವ ಕಾರ್ತಿಕ್, ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.




