ಕುಮಟ-ಕಾರವಾರ ಹೆದ್ದಾರಿಗೆ ಗುಡ್ಡ ಕುಸಿತ: 7 ಮಂದಿ ಮೃತ್ಯು
ಉತ್ತರ ಕನ್ನಡ: ಭಾರಿ ಮಳೆಯ ಪರಿಣಾಮ ಮಂಗಳವಾರ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಹಿತಿ ನೀಡಿದ್ದಾರೆ. ಕಾರಾವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಮಂದಿ ಗುಡ್ಡ ಕುಸಿತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರು.
ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ 15 ಕ್ಕೂ ಹೆಚ್ಚು ಮಂದಿ ಸಿಲುಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ರಕ್ಷಣಾ ತಂಡ ಶಾಂತಿ ನಾಯ್ಕ(37) ಎನ್ನುವವರ ಮೃತದೇಹವನ್ನು ಮಣ್ಣಿನಿಂದ ಹೊರಕ್ಕೆ ತೆಗೆದಿದ್ದಾರೆ, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದರು.
ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ನಿಂತಿರುವ ಅನೇಕ ವಾಹನಗಳಿಗೂ ಹಾನಿ ಉಂಟಾಗಿದ್ದು ಅಲ್ಲಿ ನಿಂತಿರುವ ಒಂದು ಗ್ಯಾಸ್ ಟ್ಯಾಂಕರ್ ಪಕ್ಕದಲ್ಲಿರುವ ಗಂಗಾವಳಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಅದರಲ್ಲಿದ್ದ ಚಾಲಕ ಕ್ಲೀನರ್ ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ಅಂಕೋಲಾ ತಾಲೂಕು ಆಡಳಿತ ಅಗ್ನಿಶಾಮಕದಳ ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಕಾರ್ಯಾಚಣೆ ನಡೆಸುತ್ತಿದ್ದಾರೆ.
ಮಣ್ಣಿನ ಅಡಿಯಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗುತ್ತಿದೆ ಎನ್ನಲಾಗುತ್ತಿದೆ. ಇನ್ನು ಕೂಡ ಗುಡ್ಡ ಕುಸಿತ ಆಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.