ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಪುನೀತ್ ಕೆರೆಹಳ್ಳಿ ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ನಾಯಿ ಮಾಂಸ ಸಾಗಣೆಯ ವಾಹನವನ್ನು ತಡೆದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿರುವ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ವಿಜಯ್ ಕುಮಾರ್ ಅವರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಈತನ ವಿರುದ್ಧ ಬಿಎನ್‌ಎಸ್ 132 ಆಯಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) ಹಾಗೂ 351 (2) ಸೆಕ್ಷನ್ ಆರೋಪದಡಿ ಕಾಟನ್ ಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್‌ನನ್ನು ಸಿಬ್ಬಂದಿಗಳು ಕೆಸಿ ಜನರಲ್ ಆಸ್ಪತ್ರೆಗೆ ವ್ಹೀಲ್‌ಚೇರ್‌ನಲ್ಲಿ ಕರೆದೊಯ್ದಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಬೆಳಗಿನ ಜಾವ 4.45ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಆರೋಪಿಯನ್ನು ಆತುರಾತುರದಲ್ಲಿ ಆಸ್ಪತ್ರೆಗೆ ಕರೆತಂದಿದ್ದರು. ಇದಾದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪುನೀತ್ ಕೆರೆಹಳ್ಳಿ ಪರ ವಕೀಲ ಉಮಾಶಂಕರ್ ಪ್ರತಿಕ್ರಿಯಿಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಕಾಟನ್ ಪೇಟೆ ಪೊಲೀಸರು ಪುನೀತ್ ಬಂಧಿಸಿದ್ದರು. ಈಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.





