ವಯನಾಡ್: ಭಾರೀ ಭೂ ಕುಸಿತ: ಸಾವಿನ ಸಂಖ್ಯೆ 30 ಕ್ಕೆ ಏರಿಕೆ
ವಯನಾಡ್: ಮಂಗಳವಾರ ಕೇರಳದ ಗುಡ್ಡಗಾಡು ಪ್ರದೇಶ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 30 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಮೃತರಾಗಿದ್ದಾರೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.




