‘ಮುಡಾ’ ನಿವೇಶನ ಹಂಚಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ: ಕುಮಾರಸ್ವಾಮಿ
ಮೈಸೂರು: ‘ಮುಡಾ’ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪಾದಯಾತ್ರೆ ಬಗ್ಗೆ ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕೆ ಜೆಡಿಎಸ್‌ನಿಂದ ನೈತಿಕ ಬೆಂಬಲವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಕಿಡಿಕಾರಿದ್ದಾರೆ. ಪ್ರೀತಮ್ ಗೌಡ ಯಾರು. ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.
ಕೇರಳದಲ್ಲಿ ನೂರಾರು ಜನರ ಜೀವ ಹಾನಿಯಾಗಿದೆ. ಕರ್ನಾಟಕದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಣೆ ಆಗಿದೆ. ಹಲವು ಪ್ರದೇಶಗಳು ಜಲಾವೃತವಾಗಿವೆ. ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂದು ಪಕ್ಷದ ಕೋರ್ ಕಮಿಟಿ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪಾದಯಾತ್ರೆ ಬಗ್ಗೆ ಬಿಜೆಪಿಯರೇ ತೀರ್ಮಾನ ತೆಗೆದುಕೊಂಡಿದ್ದಾರೆ. ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬೆಂಬಲ ನೀಡುತ್ತಿಲ್ಲ. ಈ ವಿಚಾರದಿಂದ ನನ್ನ ಮನಸ್ಸಿಗೂ ನೋವಾಗಿದೆ ಎಂದು ಹೇಳಿದ್ದಾರೆ.





