ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ:
ಇಬ್ಬರು ಮೃತ್ಯು, 14 ಮಂದಿ ಗಾಯ
ಶ್ರೀ ನಗರ: ಸೋಮವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಜೆವಾನ್‌ನಲ್ಲಿ ಪೊಲೀಸ್ ಶಿಬಿರದ ಬಳಿ ಭಯೋತ್ಪಾದಕರು ಪೊಲೀಸ್ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಸಿಬ್ಬಂದಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ಹೊರವಲಯದಲ್ಲಿರುವ ಪಂಥಾ ಚೌಕ್ ಪ್ರದೇಶದ ಜೆವಾನ ಬಳಿ ಅವರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಮೃತಪಟ್ಟವರಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಸೆಲೆಕ್ಷನ್ ಗ್ರೇಡ್ ಕಾನ್‌ಸ್ಟೆಬಲ್ ಸೇರಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ, ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.





