ಪುತ್ತೂರು: ಬಿಜೆಪಿ ಮುಖಂಡನ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಈ ಸಂಬಂಧ ಪುತ್ತೂರಿನ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅರುಣ್ ಕುಮಾರ್ ಪುತ್ತಿಲ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಅರುಣ್ ಕುಮಾರ್ ಪುತ್ತಿಲ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ದೂರುದಾರ ಮಹಿಳೆಗೆ ಯಾವುದೇ ರೀತಿಯ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡದಂತೆ ಅಗಸ್ಟ್ 28 ರಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯ ನಿರ್ಬಂಧಕ ಆದೇಶ ಹೊರಡಿಸಿದೆ. ಇದಾದ ಬಳಿಕ ದೂರುದಾರೆ ಒಂದು ವರ್ಷದ ಹಿಂದೆ ಅಂದರೆ 2023ರ ಜೂನ್ ತಿಂಗಳಲ್ಲಿ ನಡೆದಿದೆ ಎನ್ನಲಾದ ಘಟನೆ ಸಂಬಂಧ ಈಗ ಅಂದರೆ ಸೆಪ್ಟೆಂಬರ್ 2ರಂದು ಅತ್ಯಾಚಾರ, ಲೈಂಗಿಕ ಶೋಷಣೆಯ ಆರೋಪದ ಎಫ್‌ಐಆರ್ ದಾಖಲಿಸಿದ್ದಾರೆ.





