November 22, 2024

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ: ಡಿ.ಕೆ ಶಿವಕುಮಾರ್

0

ಮಂಗಳೂರು: ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ. ಚನ್ನಪಟ್ಟಣದ ಜನರು ಕಣ್ಣೀರು ಹಾಕಿದಾಗ ಅವರು ಎಲ್ಲಿಗೆ ಹೋಗಿದ್ದರು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚನ್ನಪಟ್ಟಣ ಅಥವಾ ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆರಿಸಿದರೂ, ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ? ಕುಮಾರಸ್ವಾಮಿ ಅಲ್ಲಿನ ಯಾವ ಕೆರೆಗೆ ನೀರು ತುಂಬಿಸಿದ್ದಾರೆ? ಚನ್ನಪಟ್ಟಣ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಿದ್ದು ಯೋಗೇಶ್ವರ್ ಅವರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲೇ ಆ ಕ್ಷೇತ್ರಕ್ಕೆ ಸಣ್ಣ ಕೆಲಸವನ್ನೂ ಮಾಡಿಲ್ಲ. ಕೇವಲ ಶಾಸಕರಾಗಿದ್ದಾಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಕುಮಾರಸ್ವಾಮಿ ಅನುದಾನ ತಂದು ಕೆಲಸ ಮಾಡಬೇಕಿತ್ತಲ್ಲವೇ? ಏಕೆ ಮಾಡಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.

‘ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಪ್ರತಿನಿಧಿಸಿದ್ದರು. ಈಗಿನ ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ. ಅವರು ಮಂಡ್ಯ ಹಾಗೂ ರಾಮನಗರದಲ್ಲಿ ಸೋತಿದ್ದಾರೆ’ ಎಂದು ನಿಖಿಲ್‌ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

‘ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂದು ಹೇಳಬೇಕು. ಯೋಗೇಶ್ವರ್ ಪಕ್ಷಾಂತರಿ ಇರಬಹುದು, ಇಲ್ಲ ಎಂದು ಹೇಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಇದ್ದವರು ಸಮಾಜವಾದಿ ಪಕ್ಷ, ಬಿಜೆಪಿ ಪಕ್ಷಕ್ಕೆ ಹೋಗಿದ್ದರು. ಎನ್ಡಿಎ ಮೈತ್ರಿ ಸರಿಯಿಲ್ಲ, ಕುಮಾರಸ್ವಾಮಿ ಸರಿಯಿಲ್ಲ. ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದಿಂದ ಒಳ್ಳೆಯದಾಗಲಿದೆ ಎಂದು ಈಗ ಮತ್ತೆ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ರಾಜ್ಯದ ಎಲ್ಲಾ ವರ್ಗದ ಜನರಿಗೆ ಐದು ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಜನತಾದಳದಲ್ಲಿ ಭವಿಷ್ಯವಿಲ್ಲ ಎಂದು ಅನೇಕ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!