ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ: 200 ದ್ವಿಚಕ್ರ ವಾಹನಗಳು ಭಸ್ಮ

ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ.
ಶನಿವಾರ ಮುಂಜಾನೆ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸುಮಾರು 12 ಅಗ್ನಿಶಾಮಕ ದಳ ವಾಹನಗಳು, ಜೊತೆಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ), ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಮತ್ತು ಸ್ಥಳೀಯ ಪೊಲೀಸ್ ತಂಡ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ತಾಸುಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ