ಮೂಡಿಗೆರೆ: ದೇವಸ್ಥಾನಕ್ಕೆ ಬರುತ್ತಿದ್ದ ಪ್ರವಾಸಿಗರ ಟಿಟಿ ವಾಹನ ಪಲ್ಟಿ: ನಾಲ್ವರಿಗೆ ಗಂಭೀರ ಗಾಯ
ಮೂಡಿಗೆರೆ: ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ಪ್ರವಾಸಿಗರ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ.
ಪ್ರವಾಸಿಗರನ್ನು ಹೊತ್ತ ಟಿಟಿ ವಾಹನ ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಬರುತ್ತಿತ್ತು ಎನ್ನಲಾಗಿದೆ ಈ ವೇಳೆ ಜಾವಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ಎಡ ಭಾಗಕ್ಕೆ ಪಲ್ಟಿಯಾಗಿ ಬಿದ್ದಿದೆ.
ಪರಿಣಾಮ ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದರೆ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.