ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಸಂಸದ ರಾಕೇಶ್ ತಮ್ಮ ಲೋಹರ್‌ಬಾಗ್‌ನಲ್ಲಿರುವ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಧನದ ನಂತರ ಭಾರೀ ಬಿಗಿ ಭದ್ರತೆಯಲ್ಲಿ ಪೊಲೀಸರು ಸಂಸದರನ್ನು ನ್ಯಾಯಾಲಯಕ್ಕೆ ಕರೆತಂದಿದ್ದಾರೆ.
ಕೋರ್ಟ್ ಸಂಸದರನ್ನು ಜೈಲಿಗೆ ಕಳುಹಿಸಿದೆ. ಜನವರಿ 17 ರಂದು ಮಹಿಳೆಯ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಸಂಸದರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಂಸದರು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದರು. ಜಿಲ್ಲೆಯ ಎಂಪಿಎಂಎಲ್‌ಎ ನ್ಯಾಯಾಲಯದಿಂದ ಜಾಮೀನು ರದ್ದಾದ ಬಳಿಕ, ಅವರು ಲಕ್ನೋ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹಿನ್ನೆಲೆ ರಾಕೇಶ್ ರಾಥೋಡ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ, ಶರಣಾಗುವಂತೆ ಹೇಳಿತ್ತು.
ಕಳೆದ ನಾಲ್ಕು ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಜ.17 ರಂದು ಪೊಲೀಸರು, ರಾಥೋಡ್ ವಿರುದ್ಧ ಕೇಸ್ ದಾಖಲಾಗಿತ್ತು.