ಮಂಗಳೂರು: ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು: ಆಫ್ರಿಕಾ ಮೂಲದ ಇಬ್ಬರು ಮಹಿಳೆಯರ ಬಂಧನ
ಮಂಗಳೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ.
37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಾಸ್ಟ್ ಕಸ್ಟಮರ್ ರೇಟ್ ಪ್ರಕಾರ, 74 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಐದು ತಿಂಗಳಿಂದ ಈ ಬೃಹತ್ ಕಾರ್ಯಾಚರಣೆ ನಡೆದಿದೆ.
ರಾಜ್ಯದ ಅತ್ಯಂತ ದೊಡ್ಡ ಡ್ರಗ್ಸ್ ಜಾಲ ಇದಾಗಿದೆ. ಡ್ರಗ್ಸ್ ಮಾಫಿಯಾದ ಕಿಂಗ್ ಪಿನ್ ಅಬ್ದುಲ್ ಫೈಸಲ್‌ನನ್ನು ಬಂಧಿಸಲಾಗಿದ್ದು, ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿದ್ದೇವೆ.
6 ತಿಂಗಳ ಹಿಂದೆ ಮಂಗಳೂರಿನ ಪಂಪ್ ವೆಲ್ ಬಳಿ ಹೈದರ್ ಎಂಬವನನ್ನು ಬಂದಿಸಿದ್ದೆವು. ಆತನಿಂದ 15 ಗ್ರಾಂ ಡ್ರಗ್ ವಶಪಡಿಸಿದ್ದೆವು. ಆತನಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ಬಂಧನಕ್ಕೆ ಸಿಸಿಬಿ ಪೊಲೀಸರು ಆರು ತಿಂಗಳಿನಿಂದ ಕಾರ್ಯಾಚರಣೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.





