ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಅಧಿಕಾರಿಯ ವಿರುದ್ಧ ಕ್ರಮ: ಬಂಗಾರಪ್ಪ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನೆನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರು ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ರೀತಿ ಮಾಡೋದು ಸರಿಯಲ್ಲ. ಇಂತಹ ವಿಷಯಗಳು ಬಹಳ ಸೂಕ್ತವಾದ ವಿಚಾರಗಳು ಇರುತ್ತವೆ. ಯಾವುದೇ ಜಾತಿ ಧರ್ಮಕ್ಕೆ ಆಗಲಿ ಗೌರವ ಕೊಡಬೇಕು. ನಮ್ಮ ಸರ್ಕಾರದಲ್ಲಿ ಈ ರೀತಿ ಆಗುತ್ತೆ ಎಂದರೆ ಕಠಿಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಯಾಕೆ ಈ ರೀತಿ ಆಗಿದೆ ಹಾಗೂ ಯಾರು ಈ ರೀತಿ ಮಾಡಿದ್ದಾರೆ ಅಂತವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.





