ಶಾಸಕ ಹರೀಶ್ ಪೂಂಜನ ವಿರುದ್ದ ಪ್ರಕರಣ ದಾಖಲು: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರಿದ ಶಾಸಕ*
ಉಪ್ಪಿನಂಗಡಿ: ನಿನ್ನೆ ರಾತ್ರಿ ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ಷೇಷ ಭಾಷಣವನ್ನು ಮಾಡಿದ್ದರು. ತುಳು ಭಾಷೆಯಲ್ಲಿ ಮಾಡಿದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.
ದ್ವೇಷ ಭಾಷಣ ಸಂಬಂಧ ಸ್ಥಳೀಯ ಮುಸ್ಲಿಂ ಮುಖಂಡ ಇಬ್ರಾಹಿಂ ಮುಸ್ಲಿಯಾರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಬಿಎನ್ ಎಸ್ ಕಾಯ್ದೆ ಕಲಂ 196, 353(2) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಊರಿನ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಭಾಷಣಕ್ಕಾಗಿ ಧಾರ್ಮಿಕ ಕಾರ್ಯಕ್ರಮದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶನಿವಾರ ರಾತ್ರಿ ಜರುಗಿತು. ಇದರಲ್ಲಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, “ತೆಕ್ಕರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ್ದ ಟ್ಯೂಬ್ ಲೈಟ್ ಅನ್ನು ಕೆಡವಿ ಡೀಸೆಲ್ ಕದಿಯುತ್ತಿದ್ದಾರೆ” ಎಂದು ಹೇಳಿದರು. ಅವರು ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷ ಪೂರಿತವಾಗಿ ಮಾತನಾಡಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
“ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮುಸ್ಲಿಂ ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್ ಲೈಟ್ ಹೊಡೆದಿದ್ದಾರೆ ಎಂದು ಹರೀಶ್ ಪೂಂಜಾ ಆರೋಪಿಸಿದ್ದಾರೆ.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಮುಸ್ಲಿಮರನ್ನೂ ಆಹ್ವಾನಿಸಲಾಗಿತ್ತು. ಬ್ರಹ್ಮಕಲಶೋತ್ಸವಕ್ಕೆ ಶುಭ ಹಾರೈಸುವ ಬ್ಯಾನರ್‌ಗಳನ್ನು ಮುಸ್ಲಿಮರು ಸಹ ಹಾಕಿದ್ದರು. ಮುಸ್ಲಿಮರೇ ದೇವಸ್ಥಾನದ ನಿರ್ಮಾಣಕ್ಕೆ ಭೂಮಿಯನ್ನು ನೀಡಿದ್ದು, ಅಲ್ಲದೆ ಧನಸಹಾಯವನ್ನೂ ಮಾಡಿದ್ದರು ಇಷ್ಟೊಂದು ಸ್ನೇಹಪರವಾಗಿ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕರು ದ್ವೇಷಪೂರಿತ ಭಾಷಣ ಮಾಡಿರುವುದು ನಾಗರಿಕ ಸಮಾಜದಿಂದ ಅಸಮಾಧಾನ ವ್ಯಕ್ತವಾಗಿದೆ.
ಬಹಳ ಸೂಕ್ಷ್ಮ ಸನ್ನಿವೇಶದಲ್ಲಿ, ಶಾಸಕ ಹರೀಶ್ ಪೂಂಜಾ ಅವರು ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.
ಸ್ಥಳೀಯ ಮುಸ್ಲಿಂ ಮುಖಂಡ ಇಬ್ರಾಹಿಂ ಮುಸ್ಲಿಯಾರ್ ಅವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ವಿಡೀಯೋಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





