ದೇರಳಕಟ್ಟೆ: ಭಾರೀ ಮಳೆಗೆ ಗೋಡೆ ಕುಸಿತ ಪ್ರಕರಣ: 10 ವರ್ಷದ ಬಾಲಕಿ ಮೃತ್ಯು
ಮಂಗಳೂರು: ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ.
ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಉಭಯ ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.




