ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿಗೆ ಎಂಟ್ರಿ ಕೊಟ್ಟ NIA ತಂಡ: ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ತನಿಖೆ
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.
ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಯುಳ್ಳ ಅಧಿಕಾರಿಗಳ ತಂಡ ಮಂಗಳೂರಿಗೆ ಬಂದಿದೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿರುವ ಬಗ್ಗೆ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಕೇಂದ್ರ ಸರ್ಕಾರಕ್ಕೆ ಅದನ್ನು ಎನ್ಐಎಗೆ ಪಡೆಯುವ ಅಧಿಕಾರವಿದೆ. ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಅವರಿಗೆ ಕೊಡಲೇಬೇಕಾದ ಪರಿಸ್ಥಿತಿ ಬಂದಿದೆ. ಯಾಕೆ ನಿರ್ದಿಷ್ಟವಾಗಿ ಆ ಕೇಸು ಎನ್ಐಎಗೆ ಕೇಳಿದ್ದಾರೆಂದು ಗೊತ್ತಿಲ್ಲ ಎಂದರು.




